ಕುಂದಾಪುರ, 22 ಫೆಬ್ರವರಿ 2025: ಪ್ರಾಕ್ತನ ವಿದ್ಯಾರ್ಥಿಗಳು ತಮ್ಮ ಶಿಕ್ಷಣ ಸಂಸ್ಥೆಯ ಪ್ರತಿನಿಧಿಗಳಾಗಿದ್ದು, ಅವರ ಸಾಧನೆಗಳು ಸಂಸ್ಥೆಯ ಘನತೆ ಹೆಚ್ಚಿಸುತ್ತವೆ. ಶೈಕ್ಷಣಿಕ ಸಂಸ್ಥೆಗಳ ಬೆಳವಣಿಗೆಗೆ ಹಾಗೂ ಭವಿಷ್ಯದ ವಿದ್ಯಾರ್ಥಿಗಳ ಸುಭದ್ರತೆಗೆ ಹಳೆ ವಿದ್ಯಾರ್ಥಿಗಳ ಸಹಕಾರ ಅಗತ್ಯ ಎಂದು ಕುಂದಾಪುರದ ನಿವೃತ್ತ ಪ್ರಾಂಶುಪಾಲರಾದ ಡಾ. ಜಿ. ಎಚ್. ಪ್ರಭಾಕರ ಶೆಟ್ಟಿ ಹೇಳಿದರು.
ಅವರು ಇಲ್ಲಿನ ಡಾ| ಬಿ.ಬಿ. ಹೆಗ್ಡೆ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಸಂಘದಿಂದ ಆಯೋಜಿಸಿದ ಸಮ್ಮಿಲನ ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಕುಂದಾಪುರ ಎಜುಕೇಷನ್ ಸೊಸೈಟಿಯ ಕಾರ್ಯದರ್ಶಿಗಳಾದ ಸೀತಾರಾಮ ನಕ್ಕತ್ತಾಯ ವಹಿಸಿ, ಕಾಲೇಜು ತನ್ನ ಹದಿನಾಲ್ಕು ವರ್ಷಗಳಲ್ಲಿ ನಡೆದು ಬಂದ ಹಾದಿಯನ್ನು ನೆನಪಿಸಿಕೊಂಡು ಕಾಲೇಜಿನ ಸಾಧನೆಯನ್ನು ವಿವರಿಸಿ ಹಳೆ ವಿದ್ಯಾರ್ಥಿಗಳ ಪ್ರೀತಿ, ವಿಶ್ವಾಸ, ಅಭಿಮಾನಕ್ಕೆ ಕೃತಜ್ಞತೆ ಸಲ್ಲಿಸಿದರು.
ಕಾಲೇಜಿನ ಪ್ರಾಂಶುಪಾಲರಾದ ಪ್ರೊ| ಕೆ. ಉಮೇಶ್ ಶೆಟ್ಟಿ ಪ್ರಾಕ್ತನ ವಿದ್ಯಾರ್ಥಿಗಳ ಸಾಧನೆ ಕಲಿತ ಕಾಲೇಜಿಗೆ ಕೀರ್ತಿ ಎಂದು ಶುಭ ಹಾರೈಸಿದರು. ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಪ್ರಾಸ್ತಾವಿಕ ಮಾತನಾಡಿದರು.
ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಆದೇಶ್ ನಾಯಕ್, ಸಂಘದ ಎಲ್ಲಾ ಪದಾಧಿಕಾರಿಗಳು, ಕಾಲೇಜಿನ ಬೋಧಕ ಹಾಗೂ ಬೋಧಕೇತರ ವೃಂದದವರು ಮತ್ತು ಅನೇಕ ಪ್ರಾಕ್ತನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಪ್ರಾಕ್ತನ ವಿದ್ಯಾರ್ಥಿ ಸಂಘದ ಕೋಶಾಧಿಕಾರಿ ಯೋಗೀಶ ಶ್ಯಾನುಭೋಗ ಸ್ವಾಗತಿಸಿ, ಸದಸ್ಯರಾದ ಸಚಿನ್ ದೇವಾಡಿಗ ವಂದಿಸಿದರು. ಕಾರ್ಯದರ್ಶಿ ದೀಪಾಪೂಜಾರಿ ಕಾರ್ಯಕ್ರಮ ನಿರೂಪಿಸಿದರು.
ಇದೇ ಸಂದರ್ಭ ಡಾಕ್ಟರೇಟ್ ಪದವಿ ಪಡೆದ ಕಾಲೇಜಿನ ಉಪ ಪ್ರಾಂಶುಪಾಲರಾದ ಡಾ| ಚೇತನ್ ಶೆಟ್ಟಿ ಕೋವಾಡಿ ಅವರಿಗೆ ಪ್ರಾಕ್ತನ ವಿದ್ಯಾರ್ಥಿ ಸಂಘದಿಂದ ಗೌರವಿಸಿ, ಸನ್ಮಾನಿಸಲಾಯಿತು.
ಅನಂತರದಲ್ಲಿ ಪ್ರಾಕ್ತನ ವಿದ್ಯಾರ್ಥಿಗಳಿಂದ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿತು.