ಸುಳ್ಯ: ನೆಹರು ಮೆಮೋರಿಯಲ್ ಕಾಲೇಜು, ಸುಳ್ಯದ ದೈಹಿಕ ಶಿಕ್ಷಣ ವಿಭಾಗದ ವತಿಯಿಂದ ರಾಷ್ಟ್ರೀಯ ಕ್ರೀಡಾ ದಿನಾಚರಣೆಯ ಅಂಗವಾಗಿ ಕಾಲೇಜಿನ ಕ್ರೀಡಾಪಟುಗಳಿಗಾಗಿ “ಅಂತರ ಶಾಂತಿ – Meditation & Mindfulness” ಕಾರ್ಯಕ್ರಮವನ್ನು ಆಗಸ್ಟ್ 29ರಂದು ಆಯೋಜಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ರುದ್ರಕುಮಾರ್ ಎಂ.ಎಂ. ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಬ್ರಹ್ಮಕುಮಾರಿ ಸಂಸ್ಥೆಯ ಸುಳ್ಯ ಕೇಂದ್ರದ ಕೇಂದ್ರ ಉಸ್ತುವಾರಿ ಬ್ರಹ್ಮಕುಮಾರಿ ಉಮಾದೇವಿ ಭಾಗವಹಿಸಿ, ಧ್ಯಾನ, ಮೈಂಡ್‌ಫುಲ್‌ನೆಸ್ ಹಾಗೂ ಆಂತರಿಕ ಶಾಂತಿಯ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು.

ಕಾಲೇಜಿನ ದೈಹಿಕ ಶಿಕ್ಷಣ ನಿರ್ದೇಶಕರಾದ ಕ್ಯಾಪ್ಟನ್ ಸೀತಾರಾಮ ಎಂ.ಡಿ. ಮಾತನಾಡಿ, ಕ್ರೀಡಾಪಟುಗಳ ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯವೂ ಅತ್ಯಂತ ಮಹತ್ವದ್ದಾಗಿದೆ. ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಲು ಮನಸ್ಸಿನ ಏಕಾಗ್ರತೆ, ಆತ್ಮವಿಶ್ವಾಸ ಹಾಗೂ ಮಾನಸಿಕ ಸ್ಥಿರತೆ ಅಗತ್ಯ ಎಂದು ತಿಳಿಸಿದರು.
ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಧ್ಯಾನ, ಮೈಂಡ್‌ಫುಲ್‌ನೆಸ್ ಹಾಗೂ ಆಂತರಿಕ ಶಾಂತಿಯ ಕುರಿತು ಪ್ರಾಯೋಗಿಕ ತರಬೇತಿ ನೀಡಲಾಯಿತು. ಈ ಮೂಲಕ ಒತ್ತಡವನ್ನು ನಿಯಂತ್ರಿಸುವುದು, ಏಕಾಗ್ರತೆಯನ್ನು ಹೆಚ್ಚಿಸಿಕೊಳ್ಳುವುದು ಹಾಗೂ ಸಕಾರಾತ್ಮಕ ಮನೋಭಾವ ಬೆಳೆಸಿಕೊಳ್ಳುವ ಕುರಿತು ಪ್ರಾಯೋಗಿಕ ಅನುಭವವನ್ನು ನೀಡಲಾಯಿತು.
ಕಾಲೇಜಿನ ಐ.ಕ್ಯೂ.ಎ.ಸಿ. ಸಂಯೋಜಕರಾದ ಡಾ. ಮಮತಾ ಕೆ. ಹಾಗೂ ಇಂಗ್ಲಿಷ್ ವಿಭಾಗದ ಉಪನ್ಯಾಸಕಿ ಭವ್ಯಾ ಪಿ.ಎಂ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಕಾಲೇಜಿನ ಕ್ರೀಡಾಪಟುಗಳು ಹಾಗೂ ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿ, ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.